ವಿಜಯಪುರ : ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸದ್ಯ ಈ ದುರ್ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಟೈರ್ ಸ್ಫೋಟದಿಂದ ನಿಯಂತ್ರಣ ತಪ್ಪಿದ ಟಿಪ್ಪರ್ :
ಪ್ರಾಥಮಿಕ ಮಾಹಿತಿಯ ಪ್ರಕಾರ, ವೇಗವಾಗಿ ಸಂಚರಿಸುತ್ತಿದ್ದ ಟಿಪ್ಪರ್ ಲಾರಿಗೆ ಏಕಾಏಕಿ ಟೈರ್ ಸ್ಫೋಟಗೊಂಡಿದೆ. ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್, ಎದುರಿನಿಂದ ಬರುತ್ತಿದ್ದ ಸರ್ಕಾರಿ ಬಸ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನು ಓದಿ : ರೈಲ್ವೆಯಲ್ಲಿ ಬಂಪರ್ ನೇಮಕಾತಿ: 6,565 ಟೆಕ್ನೀಷಿಯನ್ ಹುದ್ದೆಗಳಿಗೆ ಜೂನ್ 30ರಿಂದ ಅರ್ಜಿ ಆಹ್ವಾನ.
ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಅಪಘಾತದ ಹೊಡೆತಕ್ಕೆ ಬಸ್ ಮತ್ತು ಟಿಪ್ಪರ್ ಲಾರಿ ಸೇರಿದಂತೆ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಕೆಲಕಾಲ ಸ್ಥಳದಲ್ಲಿ ಭಯಾನಕ ವಾತಾವರಣ ನಿರ್ಮಾಣವಾಗಿತ್ತು.
ಮೂವರು ಸ್ಥಳದಲ್ಲೇ ದುರ್ಮರಣ :
ಈ ಭೀಕರ ಅಪಘಾತದಲ್ಲಿ ಟಿಪ್ಪರ್ ಚಾಲಕ ಅಶೋಕ್ ಉಟಗಿ, ಅವರ ಪತ್ನಿ ರಾಧಾಬಾಯಿ ಉಟಗಿಹಾಗೂ ಸರ್ಕಾರಿ ಬಸ್ ಚಾಲಕರಾಗಿದ್ದ ಹನುಮಂತ ಛಲವಾದಿ ಅವರು ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಬಳಿಕ ಮೃತರ ಕುಟುಂಬಗಳಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳೀಯರು ಕೂಡ ದುಃಖ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಬಸ್ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಗಾಯ :
ಅಪಘಾತ ಸಂಭವಿಸಿದ ವೇಳೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅಪಘಾತದ ನಂತರ ಸ್ಥಳದಲ್ಲಿ ಕಿರುಚಾಟ ಮತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನು ಓದಿ : ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದು ದೇಶದ ಕೀರ್ತಿ ಹೆಚ್ಚಿಸಿದ ಚಂದರಗಿಯ SPOCO’S ವಿದ್ಯಾರ್ಥಿಗಳು.
ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ, ತನಿಖೆ ಆರಂಭ :
ಘಟನೆಯ ಮಾಹಿತಿ ತಿಳಿದ ತಕ್ಷಣ ಚಡಚಣ ಪೊಲೀಸ್ ಠಾಣೆಯ ಪಿಎಸ್ಐ ಸೋಮೇಶ್ ಗೆಜ್ಜಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಪಘಾತಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ರಾಜ್ಯದಲ್ಲಿ ಇತ್ತೀಚೆಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದ್ದು, ವಾಹನ ಚಾಲಕರು ವೇಗ ನಿಯಂತ್ರಣ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂಬ ಮಾತುಗಳು ಕೇಳಿಬರುತ್ತಿವೆ.
ಇತ್ತೀಚಿನ ಎಲ್ಲಾ ಪ್ರಮುಖ ಸುದ್ದಿಗಳನ್ನು ಇಲ್ಲಿ ಓದಿ







